Sidlaghatta : ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮೂಡಿದೆ. ಕರ್ನಾಟಕ ನಾಮಕರಣವಾಗಿ 50 ವರ್ಷವಾದ ಕಾರಣ ಕರ್ನಾಟಕ ಸಂಭ್ರಮ 50ರ ಸಡಗರವೂ ಜತೆಗೂಡಿದೆ. ಪ್ರತಿಯೊಬ್ಬರ ಹೃದಯದಲ್ಲಿ ಕನ್ನಡ ಬೆಳಗಲಿ. ಕನ್ನಡ ಬೆಳೆಸುವುದು ಮತ್ತು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು ನಮ್ಮೆಲ್ಲರ ಕರ್ತವ್ಯವಾಗಲಿ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ಬೆಳಗ್ಗೆ ತಾಲ್ಲೂಕು ಕಚೇರಿಯಲ್ಲಿ ನಡೆದ 68 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ನಾಡಲ್ಲಿ ಹುಟ್ಟಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1 ರಂದು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ. ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ ಎಂದು ಹೇಳಿದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ನವೆಂಬರ್ ತಿಂಗಳಲ್ಲಿ ಮಾತ್ರ ನಾವು ಕನ್ನಡಿಗರಾದರೆ ಸಾಲದು. ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು. ಕನ್ನಡವೇ ನಮ್ಮ ಉಸಿರಾಗಿರಾಗಲಿ. ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕರುನಾಡ ನೆಲ, ಜಲ, ಜನ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡಿದೆ ಎಂದರು.
ಸಭಾ ಕಾರ್ಯಕ್ರಮಕ್ಕೆ ಮುನ್ನ ತಾಲ್ಲೂಕು ಕಚೇರಿಯ ಮೇಲೆ ಮತ್ತು ನಗರದ ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಸಕ ಬಿ.ಎನ್.ರವಿಕುಮಾರ್ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ನಗರಸಭೆ ಆಯುಕ್ತ ಜಿ.ಬಿ.ಆಂಜನೇಯುಲು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮೇಲೂರು ಮಂಜುನಾಥ, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಹಾಜರಿದ್ದರು.