Sidlaghatta : ಶಿಡ್ಲಘಟ್ಟ ನಗರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು (Nadaprabhu Kempegowda Jayanthi) ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ನಗರ ಸೇರಿದಂತೆ ತಾಲ್ಲೂಕಿನ ವಿವಿದೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿ ಒಕ್ಕಲಿಗ ಸಮುದಾಯದವರು ನಗರದ ಪ್ರಮುಖ ಬೀದಿಗಳಲ್ಲಿ ಕೆಂಪೇಗೌಡರ ಬೃಹತ್ ಪಲ್ಲಕ್ಕಿ ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಶ್ರೀ ಕೆಂಪೇಗೌಡರ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ನಗರದ ಬಸ್ ನಿಲ್ದಾಣದ ಬಳಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಕುದುರೆ ಸಾರೋಟದ ಕೆಂಪೇಗೌಡರ ಪಲ್ಲಕ್ಕಿಯ ಉತ್ಸವ ಸೇರಿದಂತೆ ತಾಲ್ಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ಕೆಂಪೇಗೌಡರ ವೇಷ ಭೂಷಣಗಳೊಂದಿಗೆ ಅಲಂಕರಿಸಿದ್ದ ಟ್ರ್ಯಾಕ್ಟರ್‌ಗಳು, ಮೆರವಣಿಗೆಗೆ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಕೀಲು ಕುದುರೆ, ಪೂಜಾ ಕುಣಿತ, ಪಟ ಕುಣಿತ, ನಾಸಿಕ್ ಡೋಲ್, ತಮಟೆ ಮತ್ತಿತರ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದ್ದವು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂದಾಗ ರಸ್ತೆಯ ಅಕ್ಕಪಕ್ಕದ ಅಂಗಡಿ, ಮನೆಗಳಲ್ಲಿನ ಜನರು ಹೊರಗಡೆ ಬಂದು ಮೆರವಣಿಗೆಯ ಉದ್ದಕ್ಕೂ ಸಾಗಿ ಬಂದ ಪಲ್ಲಕ್ಕಿಯ ಉತ್ಸವ ವಾಹನಗಳು, ಕಲಾ ತಂಡಗಳನ್ನು ಕಣ್ತುಂಬಿಕೊಂಡರು.
ಮೆರವಣಿಗೆಯ ಉದ್ದಕ್ಕೂ ಕೆಂಪೇಗೌಡರ ಭಾವಚಿತ್ರಗಳು, ಕೆಂಪೇಗೌಡರ ವೇಷಧಾರಿಗಳು ನೋಡುಗರ ಕಣ್ಮನ ಸೆಳೆಯುತ್ತಿದ್ದವು.