Sidlaghatta : ಶಿಡ್ಲಘಟ್ಟ ನಗರದ ದಿಬ್ಬೂರಹಳ್ಳಿ ರಸ್ತೆಯ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿದ ನಗರಸಭೆ ಪೌರಾಯುಕ್ತ ಶ್ರೀಕಾಂತ್ ನೇತೃತ್ವದ ತಂಡ ವಿವಿಧ ಅಂಗಡಿಗಳಲ್ಲಿ ಮಾರಾಟಕ್ಕೆ ಇಟ್ಟಿದ್ದ ನಿಷೇದಿತ ಪ್ಲಾಸ್ಟಿಕ್ ವಶಕ್ಕೆ ಪಡೆದು, ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಸರ್ಕಾರ ಈ ಹಿಂದೆಯೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಅವುಗಳನ್ನು ಮಾರಾಟ ಮಾಡದಂತೆಯೂ ಎಚ್ಚರಿಸಲಾಗಿದೆ. ಆದರೆ, ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ನಡೆದಿರುವ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಈಗಾಗಲೆ ನಗರದ ವಿವಿಧ ಅಂಗಡಿ, ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಸ್ಥಗಿತಗೊಂಡಿದ್ದು, ಬರುವ ದಿನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳ್ಳಲಿದೆ ಎಂದು ನಗರಸಭೆ ಪೌರಾಯುಕ್ತ ಶ್ರೀಕಾಂತ್ ತಿಳಿಸಿದ್ದಾರೆ.
ಇನ್ನು ಮುಂದೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್ ಕಂಡು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಾಳಿ ವೇಳೆ ವಿವಿಧ ಅಂಗಡಿಗಳಿಂದ 12 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದು, ಮಾರಾಟಗಾರರಿಗೆ 1500 ರೂ ದಂಡ ವಿಧಿಸಲಾಯಿತು. ನಗರಸಭೆ ಸಿಬ್ಬಂದಿ ಹಾಜರಿದ್ದರು.