
Sidlaghatta : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗೆ ಒಂದು ದಿನದ ತರಬೇತಿ ಕಾರ್ಯಗಾರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಮುರಳಿ ಆನಂದ್, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಪೂರ್ವ ತಯಾರಿ ಮತ್ತು ಸಮರ್ಪಕ ತರಬೇತಿಯ ಅಗತ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ದಿನಪತ್ರಿಕೆಗಳ ಓದು ಕಡ್ಡಾಯವೆಂದು ಹೇಳಿದರು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ನಿರ್ದಿಷ್ಟ ಕ್ರಮ ಮತ್ತು ಅನುಭವೀ ತಜ್ಞರ ಮಾರ್ಗದರ್ಶನ ಅಗತ್ಯವಾಗಿದೆ. ಈ ರೀತಿಯ ಕಾರ್ಯಗಾರಗಳು ವಿದ್ಯಾರ್ಥಿಗಳಿಗೆ ಉತ್ತಮ ಪಾಠವಾಗಿ ಮಾರ್ಗದರ್ಶನ ನೀಡುತ್ತವೆ ಎಂದು ಅವರು ವಿವರಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ.ಎ ಮಾತನಾಡಿ, “ಒಬ್ಬ ವಿದ್ಯಾರ್ಥಿ ಐಎಎಸ್, ಐಪಿಎಸ್ ಅಥವಾ ಕೆಎಎಸ್ ಅಧಿಕಾರಿಯಾಗಬೇಕೆಂದರೆ ಶ್ರದ್ದೆ, ಗಮನ ಹಾಗೂ ಅವಿರತ ಓದು ಅತ್ಯವಶ್ಯಕ. ಮೊಬೈಲ್ ಬಳಕೆ ಹೆಚ್ಚಾಗುತ್ತಿರುವುದು ಗಮನ ಬೇಧಿಸುವ ಪ್ರಮುಖ ಕಾರಣ. ಓದುವ ಸಮಯದಲ್ಲಿ ಮೊಬೈಲ್ ಬಳಕೆಯಿಂದ ದೂರವಿದ್ದರೆ ಒಳ್ಳೆಯ ಫಲಿತಾಂಶ ಪಡೆಯಲು ಸಾಧ್ಯ” ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಸುಪ್ರಿಯಾ, ಗಣೇಶ್ ಮತ್ತು ಶ್ರೀನಿವಾಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ತಂತ್ರಗಳನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಓದುವ ವಿಧಾನ, ಸಮಯ ನಿರ್ವಹಣೆ, ಪರೀಕ್ಷಾ ತಂತ್ರಗಳು ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜಶಾಸ್ತ್ರದ ಉಪನ್ಯಾಸಕ ಪ್ರೊ. ಆದಿನಾರಾಯಣ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಗಣೇಶ್, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಜಿಲ್ಲಾ ಸಂಯೋಜಕರು ಶ್ರೀನಿವಾಸ್, ಉಪನ್ಯಾಸಕರು ಹಾಗೂ ಹಲವಾರು ವಿದ್ಯಾರ್ಥಿಗಳು ಹಾಜರಿದ್ದರು.