
Sidlaghatta : ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆ ಎದುರಿಸಬೇಕು ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮನವಿ ಮಾಡಿದರು. ಪೋಷಕರು ಮಕ್ಕಳ ಮೇಲೆ ವಿನಾಕಾರಣ ಹೆಚ್ಚು ಅಂಕಗಳಿಸಬೇಕೆಂದು ಒತ್ತಡ ಹಾಕದೆ, ಅವರಿಗಾಗಿ ಮನೆಯಲ್ಲಿ ಶಾಂತ ಮತ್ತು ಉತ್ತೇಜನಕಾರಿ ವಾತಾವರಣವನ್ನು ನಿರ್ಮಿಸಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಗಳ ಶಿಸ್ತುಬದ್ಧ ಆಯೋಜನೆಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಆತಂಕದಿಂದ ದೂರವಿದ್ದು ಸಮಚಿತ್ತದಿಂದ ಪರೀಕ್ಷೆ ಬರೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಲ್ಲೂಕಿನಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 1314 ಬಾಲಕರು ಮತ್ತು 1353 ಬಾಲಕಿಯರು ಸೇರಿ 2667 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಕೇಂದ್ರಗಳಲ್ಲಿ 110 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಕೊಠಡಿಗೆ ಒಬ್ಬರಂತೆ 110 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮೇಲ್ವಿಚಾರಕರ ಮೊಬೈಲ್‌ಗಳೂ ಸೇರಿದಂತೆ ಎಲ್ಲರ ಮೊಬೈಲ್‌ಗಳನ್ನು ಸಂಗ್ರಹಿಸಲು 10 ಮಂದಿ ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಕಸ್ಟೋಡಿಯನ್, ಸ್ಥಳೀಯ ಜಾಗೃತ ದಳ, ವಿಚಕ್ಷಣ ದಳ ಸಿಬ್ಬಂದಿಗಳನ್ನು ಈಗಾಗಲೇ ನೇಮಿಸಲಾಗಿದೆ.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಬೆಸ್ಕಾಂ, ಆರೋಗ್ಯ ಇಲಾಖೆ, ಖಜಾನೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.