Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಗುರುವಾರ ‘ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಕಾರ್ಯಪಡೆ’ ಸಭೆ (World Day Against Child Labour) (Priliminary Meeting) ನಡೆಸಲಾಯಿತು.
ಅಭಯಲ್ಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಜೂನ್12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕೇಂದ್ರದಲ್ಲಿ ಜಾಗೃತಿ ಜಾಥಾ ಹಾಗೂ ಜಿಲ್ಲೆಯಾದ್ಯಂತ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕು. ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ನಗರದ ಜೂನಿಯರ್ ಕಾಲೇಜು ಆವರಣದಿಂದ ಆರಂಭವಾಗಿ ಪ್ರಮುಖ ರಸ್ತೆಗಳ ಮೂಲಕ ಬಿ.ಆರ್. ಅಂಬೇಡ್ಕರ್ ಭವನ ತಲುಪಲಿದೆ. ನಂತರ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಪ್ಯಾನ್ ಇಂಡಿಯಾ ಕಾರ್ಯಕ್ರಮದಡಿ ಜೂನ್ 1 ರಿಂದಲೇ ವಿವಿಧ ಅರಿವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಕೆಲಸದ ಸ್ಥಳಗಳಲ್ಲಿ ಅನಿರೀಕ್ಷಿತ ದಾಳಿಗಳನ್ನು ಕೈಗೊಂಡು ಬಾಲಕಾರ್ಮಿಕರಾಗಿ ಸಿಲುಕಿರುವ ಮಕ್ಕಳನ್ನು ರಕ್ಷಿಸುವ ಮೂಲಕ ಈ ವರ್ಷದ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ವಿಶೇಷ ಹಾಗೂ ಪರಿಣಾಮಕಾರಿಯಾಗಿ ಆಯೋಜಿಸ ಬೇಕಾಗಿರುತ್ತದೆ. ಪ್ಯಾನ್ ಇಂಡಿಯಾ ಕಾರ್ಯಕ್ರಮವೂ ಈ ತಿಂಗಳ ಕೊನೆಯವರೆಗೆ ನಡೆಯಲಿದೆ “ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕಾರ್ಯಪಡೆಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು.