Chikkaballapur : ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2021-22 ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿ.ಕೆ. ಮಿಥುನ್ ಕುಮಾರ್ ” ಯುವಜನೋತ್ಸವ ಯುವಜನರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು . ಇಂತಹ ಉತ್ಸವ, ಸ್ಪರ್ಧೆಗಳಿಂದ ಯುವಜನರು ತಮ್ಮಲ್ಲಿರುವ ಪ್ರತಿಭೆ, ಕೌಶಲಗಳನ್ನು ಪ್ರದರ್ಶಿಸಲು ಸಹಕಾರಿಯಾಗಿದೆ ಯುವಕರು ಈ ವೇದಿಕೆಯ ಸದ್ಬಳಕೆ ಮಾಡಿಕೊಳ್ಳಬೇಕು. ಕೋವಿಡ್ ಹಾಗೂ ಶಾಲಾ ಕಾಲೇಜುಗಳ ಪರೀಕ್ಷೆಗಳ ಹಿನ್ನೆಲೆಯಲ್ಲಿ ಯುವಜನೋತ್ಸವದಲ್ಲಿ ಯುವಜನರ ಭಾಗವಹಿಸುವಿಕೆ ಕಡಿಮೆಯಾಗಿದೆ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು.” ಎಂದು ಹೇಳಿದರು.
ಯುವಜನರು ತಂತ್ರಜ್ಞಾನದ ಪ್ರಭಾವದಿಂದ ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗಳು ಶೈಕ್ಷಣಿಕ ಕಲಿಕೆಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ಜಿಲ್ಲಾ ಸಾರ್ವಜನಿಕ ಪದವಿ ಪೂರ್ವ ಶಿಕ್ಷಣದ ಉಪನಿರ್ದೇಶಕ ಆನಂದ್, ಜಿಲ್ಲಾ ರಾಷ್ಟ್ರೀಯ ಸೇವಾ ಘಟಕದ ಆಯೋಜಕ ನಾಗೇಂದ್ರಯ್ಯ, ಎನ್.ಎಸ್.ಎಸ್ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.